2
ಐಕ್ಯಮತದಿಂದಿದ್ದು ಒಬ್ಬರನ್ನೊಬ್ಬರು ಪರಾಂಬರಿಸಿರಿ
1 ನಿಮ್ಮಲ್ಲಿ ಕ್ರಿಸ್ತನಿಂದಾದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯ ದಯಾರಸಗಳು ಇವೆಯೋ?
2 ನಿಮ್ಮಲ್ಲಿ ಇವುಗಳು ಇರುವುದಾದರೆ, ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ. ಆಗ ನನ್ನ ಸಂತೋಷವು ಪರಿಪೂರ್ಣವಾಗುವುದು. ಒಬ್ಬರಿಗೊಬ್ಬರು ಒಂದೇ ಪ್ರೀತಿ ಉಳ್ಳವರಾಗಿರಿ. ಅನ್ಯೋನ್ಯಭಾವವುಳ್ಳವರಾಗಿದ್ದು ಒಂದೇ ಗುರಿಯಿಂದ ಜೀವಿಸಿರಿ.
3 ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.
4 ನಿಮ್ಮ ಅಭಿಲಾಷೆಗಳ ಬಗ್ಗೆ ಮಾತ್ರ ಚಿಂತಿಸದೆ ಇತರರ ಜೀವಿತದ ಬಗ್ಗೆಯೂ ಚಿಂತಿಸಿರಿ.
ನಿಸ್ವಾರ್ಥರಾಗಿರುವುದನ್ನು ಕ್ರಿಸ್ತನಿಂದ ಕಲಿತುಕೊಳ್ಳಿರಿ
5 ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.
6 ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮನಾಗಿದ್ದರೂ
ಆ ಪದವಿಯನ್ನು ಬಿಡಲಾರೆ ಎನ್ನಲಿಲ್ಲ.
7 ಆ ಪದವಿಯನ್ನು ಆತನು ಬಿಟ್ಟುಕೊಟ್ಟು
ಸೇವಕನ ಸ್ವಭಾವವನ್ನು ಧರಿಸಿಕೊಂಡು ಮಾನವ ರೂಪದಲ್ಲಿ ಬಂದನು.
8 ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ
ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ,
ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು.
9 ಆದ್ದರಿಂದ ದೇವರು ಆತನನ್ನು ಅತ್ಯುನ್ನತವಾದ ಸ್ಥಾನಕ್ಕೇರಿಸಿ
ಉಳಿದೆಲ್ಲ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
10 ಆದ್ದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು
ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು,
11 “ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು.
ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.
ದೇವರ ಇಷ್ಟಕ್ಕನುಸಾರವಾದ ಜನರಾಗಿರಿ
12 ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
13 ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.
14 ನೀವು ಮಾಡುವ ಪ್ರತಿಯೊಂದನ್ನು ಗುಣಗುಟ್ಟದೆಯೂ ವಿವಾದವಿಲ್ಲದೆಯೂ ಮಾಡಿರಿ.
15 ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.
16 ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.
17 ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.
18 ಹಾಗೆಯೇ ನೀವು ಸಹ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಿಸಿರಿ.
ತಿಮೊಥೆ ಮತ್ತು ಎಪಫ್ರೊದೀತರ ಸುದ್ದಿ
19 ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು.
20 ಅವನಂತೆ ನಿಮ್ಮ ವಿಷಯದಲ್ಲಿ ನಿಜವಾಗಿಯೂ ಚಿಂತಿಸುವವರು ನನ್ನ ಬಳಿ ಯಾರೂ ಇಲ್ಲ.
21 ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.
22 ತಿಮೊಥೆಯನು ಎಂಥವನೆಂಬುದು ನಿಮಗೆ ಗೊತ್ತಿದೆ. ಮಗನು ತನ್ನ ತಂದೆಯೊಡನೆ ಸೇವೆ ಮಾಡುವಂತೆ ಅವನು ಸುವಾರ್ತೆಯನ್ನು ತಿಳಿಸುವುದರಲ್ಲಿ ನನ್ನೊಂದಿಗೆ ಸೇವೆ ಮಾಡಿದನು.
23 ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶವು ತಿಳಿದಕೂಡಲೇ ಅವನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ.
24 ಅಲ್ಲದೆ ಪ್ರಭುವಿನ ಸಹಾಯದಿಂದ ನಿಮ್ಮ ಬಳಿಗೆ ಅದಷ್ಟು ಬೇಗನೆ ಬರುತ್ತೇನೆ ಎಂಬ ಭರವಸೆ ನನಗಿದೆ.
25 ಎಪಫ್ರೊದೀತನು ಕ್ರಿಸ್ತನಲ್ಲಿ ನನ್ನ ಸಹೋದರನಾಗಿದ್ದಾನೆ. ಕ್ರಿಸ್ತನ ಸೈನ್ಯದಲ್ಲಿ ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಸೇವೆ ಮಾಡುತ್ತಿದ್ದಾನೆ. ನನಗೆ ಸಹಾಯಬೇಕಿದ್ದಾಗ, ನೀವು ಅವನನ್ನು ನನ್ನ ಬಳಿಗೆ ಕಳುಹಿಸಿಕೊಟ್ಟಿರಿ. ಈಗ ನಾನು ಅವನನ್ನು ನಿಮ್ಮ ಬಳಿಗೆ ಮತ್ತೆ ಕಳುಹಿಸಬೇಕೆಂದಿದ್ದೇನೆ.
26 ಏಕೆಂದರೆ ಅವನು ನಿಮ್ಮೆಲ್ಲರನ್ನು ನೋಡಲು ಬಹು ತವಕಪಡುತ್ತಿದ್ದಾನೆ. ತಾನು ಅಸ್ವಸ್ಥನಾಗಿದ್ದದ್ದು ನಿಮಗೆ ತಿಳಿದದ್ದರಿಂದ ಅವನಿಗೆ ಚಿಂತೆಯಾಗಿದೆ.
27 ಅವನು ಅನಾರೋಗ್ಯದಿಂದ ಸಾಯುವ ಸ್ಥಿತಿಯಲ್ಲಿದ್ದನು. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನ್ನನ್ನು ಸಹ ಕರುಣಿಸಿದನು.
28 ಆದ್ದರಿಂದ ಅವನನ್ನು ನಿಮ್ಮ ಬಳಿಗೆ ಕಳುಹಿಸಿಕೊಡಲು ನಾನು ಬಹಳ ತವಕಪಡುತ್ತಿದ್ದೇನೆ. ನೀವು ಅವನನ್ನು ನೋಡಿದಾಗ ಸಂತೋಷಪಡುತ್ತೀರಿ ಮತ್ತು ನಿಮ್ಮ ವಿಷಯದಲ್ಲಿ ನನಗಿರುವ ಚಿಂತೆಯು ಕೊನೆಗೊಳ್ಳುತ್ತದೆ.
29 ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ.
30 ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.