16
ರಚನೆಗಾರ: ದಾವೀದ.
ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ.
ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು.
ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು.
ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು;
ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.
 
ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ.
ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ,
ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.
ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ.
ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.
ನನ್ನ ಪಾಲು* ರಮಣೀಯವಾಗಿದೆ.
ನನ್ನ ಸ್ವಾಸ್ತ್ಯವು ಬಹು ಸುಂದರವಾಗಿದೆ.
ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು;
ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.
 
ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.
ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ.
ನನ್ನ ದೇಹವೂ ಸುರಕ್ಷಿತವಾಗಿರುವುದು.
10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ.
ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.
11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ.
ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು;
ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.
 
* 16:6 ಪಾಲು ಅಥವಾ “ಭೂಮಿಯ ಭಾಗ.” 16:6 ಸ್ವಾಸ್ತ್ಯ ಇದರ ಅರ್ಥ: ಪ್ರತಿಯೊಂದು ಯೆಹೂದ್ಯ ಕುಟುಂಬವು ದೇವರಿಂದ ಸ್ವೀಕರಿಸಿದ ಭೂಮಿ.