98
ಸ್ತುತಿಗೀತೆ.
ಯೆಹೋವನಿಗೆ ಹೊಸಹಾಡನ್ನು ಹಾಡಿರಿ.
ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ!
ಆತನ ಬಲಗೈಯೂ ಪರಿಶುದ್ಧ ಬಾಹುವೂ
ಆತನಿಗೆ ಜಯವನ್ನು ಉಂಟುಮಾಡಿವೆ.
ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು.
ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.
ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ.
ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.
ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ.
ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ!
ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ.
ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ.
ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ.
ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ!
ಸಮುದ್ರವೂ ಭೂಮಿಯೂ
ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ.
ನದಿಗಳೇ, ಚಪ್ಪಾಳೆ ತಟ್ಟಿರಿ!
ಬೆಟ್ಟಗಳೇ, ಒಟ್ಟಾಗಿ ಹಾಡಿರಿ!
ಯೆಹೋವನ ಎದುರಿನಲ್ಲಿ ಹಾಡಿರಿ,
ಯಾಕೆಂದರೆ ಆತನು ಭೂಲೋಕವನ್ನು ಆಳಲು* ಬರುತ್ತಿದ್ದಾನೆ.
ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ.
ಆತನು ಜನರನ್ನು ನೀತಿಯಿಂದ ಆಳುತ್ತಾನೆ.
 
* 98:9 ಆಳಲು ಅಥವಾ ನ್ಯಾಯತೀರಿಸಲು