99
ಯೆಹೋವನೇ ರಾಜನು!
ಜನಾಂಗಗಳು ಭಯದಿಂದ ನಡುಗಲಿ.
ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ.
ಭೂಮಿಯು ಭಯದಿಂದ ನಡುಗಲಿ.
ಚೀಯೋನಿನ ಯೆಹೋವನು ದೊಡ್ಡವನು!
ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.
ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ.
ಆತನೇ ಪರಿಶುದ್ಧನು.
ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು.
ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ.
ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ,
ಆತನ ಪವಿತ್ರ ಪಾದಪೀಠಕ್ಕೆ* ಅಡ್ಡಬೀಳಿರಿ.
ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು.
ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು.
ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು.
ಅವರು ಆಜ್ಞೆಗಳಿಗೆ ವಿಧೇಯರಾದರು.
ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ.
ನೀನು ಕ್ಷಮಿಸುವ ದೇವರೆಂದೂ
ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ.
ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ.
ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!
 
* 99:5 ಪಾದಪೀಠ ಬಹುಶಃ, ಇದು ದೇವಾಲಯವನ್ನು ಸೂಚಿಸುತ್ತದೆ.