3
ಪ್ರಾರ್ಥನೆಗಾಗಿ ವಿನಂತಿ
1 ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
2 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.
3 ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
4 ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.
5 ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
ಮೈಗಳ್ಳರಿಗೆ ಎಚ್ಚರಿಕೆ
6 ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
7 ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
8 ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
9 ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.
10 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.
12 ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
13 ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
14 ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
15 ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.
ಸಮಾಪ್ತಿ ವಾಕ್ಯಗಳು
16 ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
17 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.
18 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.